ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

ವಿಧಾನಸಭೆ ಚುನಾವಣಾ ಕಣ ರಂಗೇರಲಾರಂಭಿಸಿದೆ. ನಾಮಪತ್ರ ಸಲ್ಲಿಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಮೇ ೧೦ಕ್ಕೆ ಮತದಾನ ನಡೆಯಲಿದ್ದು, ಮೇ ೧೩ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ವೇಳೆ ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಚುನಾವಣಾ ಆಯೋಗವು ತಿಳಿಸಿದೆ. ಈ ಕುರಿತ ಒಂದು ವರದಿ..

ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಏ.೨೦ರವರೆಗೆ ನಡೆಯಲಿದೆ. ಏ.೨೧ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಏ.೨೪ರಂದು ಕೊನೆಯ ದಿನವಾಗಿದೆ. ಅಂದು ಮಧ್ಯಾಹ್ನ ೩ ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಬಹುದು. ಮೇ ೧೦ರಂದು ಮತದಾನ ಜರುಗಲಿದ್ದು, ಮೇ ೧೩ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ನಾಮಪತ್ರ ಸಲ್ಲಿಕೆಗೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಪಕ್ಷಗಳು ಘೋಷಣೆ ಮಾಡಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಕಾರ್ಯವನ್ನು ಆರಂಭಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ. ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ ೧೧ರಿಂದ ಮಧ್ಯಾಹ್ನ ೩ಗಂಟೆವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು. ತಮ್ಮ ಸಮಯವನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಏ.೧೪ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ೧೬ರಂದು ಭಾನುವಾರ ಸಾರ್ವತ್ರಿಕ ರಜೆ ದಿನವಾಗಿರುವುದರಿಂದ ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ.

ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಸೇರಿದಂತೆ ಒಟ್ಟು ಐವರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶ ಇದೆ. ೧೦೦ ಮೀಟರ್ ವ್ಯಾಪ್ತಿಯಲ್ಲಿ ಮೂರು ವಾಹನಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ೧೪೬ ವೆಚ್ಚ ನಿರ್ವಹಣಾ ವೀಕ್ಷಕರು, ೧೨೦ ಸಾಮಾನ್ಯ ವೀಕ್ಷಕರು ಸೇರಿದಂತೆ ೩೭ ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ.

ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಯಾವುದೇ ಚುನಾವಣೆಯಲ್ಲಿ ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲೇ ಕಡಿಮೆ ಮತದಾನವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಿದೆಯೋ ಅಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಲು ಆಯೋಗವು ಸೂಕ್ತ ಕ್ರಮ ಕೈಗೊಂಡಿದೆ.


  • ಆಕೃತಿ ನ್ಯೂಸ್
0 0 votes
Article Rating

Leave a Reply

0 Comments
Inline Feedbacks
View all comments
Home
News
Search
All Articles
Videos
About
0
Would love your thoughts, please comment.x
()
x
%d bloggers like this:
Aakruti Kannada

FREE
VIEW